ಪರೀಕ್ಷಾ ಪಾವಿತ್ರತೆ ಕಾಪಾಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ

ರಾಜ್ಯ

ಪರೀಕ್ಷಾ ಪಾವಿತ್ರತೆ ಕಾಪಾಡಿ: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ

 

 

ಜಿಲ್ಲೆಯಲ್ಲಿ ಇದೇ ಜೂನ್ 14 ರಿಂದ 22 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ನಡೆಯಲಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪರೀಕ್ಷಾ ಪಾವಿತ್ರತೆ ಕಾಪಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆ-2ಗೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪದೋಷಗಳಿಗ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ನಕಲು ಆಗದಂತೆ ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ದಿನಗಳಂದು ಆಯಾ ತಾಲ್ಲೂಕಿನ ತಹಶೀಲ್ದಾರ್‍ಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಕ್ರಮವಹಿಸಲಾಗುವುದು. ಜಿಲ್ಲೆಯ 19 ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಲ್ಲಿ 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತದ, ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುವುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದೀನ್ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 6421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸುವುದು. ಪ್ರಶ್ನೆ  ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ನೇಮಕ ಮಾಡಲಾಗಿರುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ  ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಪತ್ರ ವ್ಯವಹರಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳ ಸುತ್ತ ಅಕ್ರಮ ನಡೆಯದಂತೆ 144 ಸೆಕ್ಷನ್ ಜಾರಿ ಆದೇಶ ಮಾಡುವಂತೆ ಮನವಿ ಮಾಡಿದರು.
ಪರೀಕ್ಷಾ ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲ್ಲೂಕು ಕೇಂದ್ರದಲ್ಲಿ ಉಪ ಖಜಾನೆಗಳಲ್ಲಿ ಸಂರಕ್ಷಿಸಿಡುವುದು. ಪರೀಕ್ಷಾ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮವಹಿಸಬೇಕು. ಎಸ್‍ಎಲ್‍ಎಲ್‍ಸಿ ಪರೀಕ್ಷೆ-2ರ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ಮೂಲಕ ಪ್ರತಿ ದಿನದ ಪರೀಕ್ಷಾ ಚಟುವಟಿಕೆಗಳನ್ನು ವೀಕ್ಷಿಸಲು ಚಿತ್ರದುರ್ಗ ಡಯಟ್‍ನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ವೆಬ್ ಕಾಸ್ಟಿಂಗ್ ಕಾರ್ಯ ಮಾಡಲು ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಬಿಇಒ ನಾಗಭೂಷಣ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

Leave a Reply

Your email address will not be published. Required fields are marked *