ಚಿತ್ರದುರ್ಗ ಜಿಲ್ಲಾ ಕೇಂದ್ರ ಮುಖ್ಯ ರಸ್ತೆ ಅಗಲೀಕರಣಕ್ಕೆ ಕ್ರಮವಹಿಸಿ: ಸಚಿವ ಡಿ.ಸುಧಾಕರ್

ರಾಜ್ಯ

ಚಿತ್ರದುರ್ಗ ಜಿಲ್ಲಾ ಕೇಂದ್ರ ಮುಖ್ಯ ರಸ್ತೆ ಅಗಲೀಕರಣಕ್ಕೆ ಕ್ರಮವಹಿಸಿ:

 

 

ಚಿತ್ರದುರ್ಗ ಜಿಲ್ಲಾ ಕೇಂದ್ರದ ನಗರದ ಬಿ.ಡಿ.ರಸ್ತೆಯನ್ನು ಪ್ರಥಮಾಧ್ಯತೆ ಮೇರೆಗೆ ಅಗಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗದಿಂದ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದವರೆಗೂ ನಿಯಮಾನುಸಾರ ರಸ್ತೆ ಅಗಲವಿರಬೇಕು,  ಕಿರಿದಾಗಿರುವ ಕಡೆಗಳಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ವಹಿಸಬೇಕು. ಒಂದು ವೇಳೆ ಈ ಮಾರ್ಗದಲ್ಲಿ ಯಾರಾದರೂ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದರೆ ಅದನ್ನು ಕೂಡಲೆ ತೆರವುಗೊಳಿಸಲು ಕ್ರಮವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಜಿಲ್ಲಾ ಕೇಂದ್ರದ ಮುಖ್ಯ ರಸ್ತೆಯನ್ನು ಅಗಲೀಕರಣಕ್ಕೆ ತ್ವರಿತವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಬರುವವರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಕಳೆದ 29 ವರ್ಷದಿಂದ ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಲು ಸಾಧ್ಯವಿಲ್ಲ. ಅಧಿಕಾರಿಗಳಿಗೆ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದ ಶಾಸಕರು, ಹೊಳಲ್ಕೆರೆಯಲ್ಲಿ ಯಾರ ಮುಲಾಜಿಗೂ ಒಳಗಾಗದೇ ರಸ್ತೆ ಅಗಲೀಕರಣ ಮಾಡಲಾಗಿದೆ ಎಂದು ತಿಳಿಸಿದರು.
ಶಾಸಕ ವೀರೇಂದ್ರ ಪಪ್ಪಿ ಮಾತನಾಡಿ, ಚಿತ್ರದುರ್ಗ ನಗರದ ಒಂದು ಸುತ್ತು ಈಗಾಗಲೇ ಡಿವೈಡರ್ ತೆರವು ಮಾಡಲಾಗಿದೆ. ಜೆಸಿಆರ್ ರಸ್ತೆ, ಎಸ್‍ಬಿಐ ಬ್ಯಾಂಕ್‍ನಿಂದ ಗಾಂಧಿ ಸರ್ಕಲ್‍ವರೆಗಿನ ಮಾರ್ಗದಲ್ಲಿ ಸ್ಕೈವಾಕ್‍ಗೆ ಪ್ರಸ್ತಾವನೆ ಸಿದ್ದವಾಗುತ್ತಿದೆ. ನಗರದ ಚಳ್ಳಕೆರೆ ಗೇಟ್‍ನಲ್ಲಿ ಬಹಳಷ್ಟು ವಾಹನಗಳು ಸಂಚಾರ ಮಾಡುತ್ತವೆ. ಹಾಗಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಈ ಚಳ್ಳಕೆರೆ ಗೇಟ್‍ನಲ್ಲಿ ವೃತ್ತ ಮಾಡಿಸಿ ಎಂದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಟಿ.ರಘುಮೂರ್ತಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.

Leave a Reply

Your email address will not be published. Required fields are marked *