ಸಮನ್ವಯದಿಂದ ಪರೀಕ್ಷಾ ಕಾರ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ

ರಾಜ್ಯ

ಸಮನ್ವಯದಿಂದ ಪರೀಕ್ಷಾ ಕಾರ್ಯನಿರ್ವಹಿಸಿ: ಅಪರ ಜಿಲ್ಲಾಧಿಕಾರಿ ಬಿಟಿ ಕುಮಾರಸ್ವಾಮಿ

ಆಗಸ್ಟ್ 2 ರಿಂದ 9 ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ ಪರೀಕ್ಷೆ 3 ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆ ಹೊರತ್ತಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ತಪ್ಪದೇ ಎಲ್ಲಾ ಅಧಿಕಾರಿಗಳು ಪಾಲನೆ ಮಾಡಬೇಕು. ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಯಾವುದೇ ಅವ್ಯವಹಾರಗಳು ಹಾಗೂ ಪರೀಕ್ಷಾ ಅಕ್ರಮಗಳಿಗೆ ಎಡೆ ಮಾಡಿಕೊಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.
ಕಳೆದ ಬಾರಿ ಚಿತ್ರದುರ್ಗ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿತ್ತು. ಈ ಬಾರಿ ಕಡೆಯ ಸ್ಥಾನಕ್ಕೆ ಕುಸಿದಿದೆ. ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಶಿಕ್ಷಕರು ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶವನ್ನು ಹೆಚ್ಚಿಸಲು ಪರಿಶ್ರಮವಹಿಸಿ ಕಾರ್ಯನಿರ್ವಹಿಸಬೇಕು. ತಮ್ಮಲ್ಲಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಬಲಪಡಿಸಬೇಕು. ಇದು ಸ್ಪರ್ಧಾತ್ಮಕ ಜಗತ್ತು, ಈ ಜಗತ್ತಿನಲ್ಲಿ ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಮುನ್ನುಗ್ಗಬೇಕು. ನಿಮ್ಮ ಕರ್ತವ್ಯದ ಜೊತೆಗೆ ಮಕ್ಕಳ ಭವಿಷ್ಯವನ್ನು ರೂಪಿಸಲು ಪಣತೊಟ್ಟು ಕಾರ್ಯ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾವಿ ಈ ಸಂದರ್ಭದಲ್ಲಿ ಹೇಳಿದರು.

 

 

14 ಪರೀಕ್ಷಾ ಕೇಂದ್ರ, 3263 ವಿದ್ಯಾರ್ಥಿಗಳು: ಆಗಸ್ಟ್ 02 ರಿಂದ ಆಗಸ್ಟ್ 09 ವರೆಗೆ ಜಿಲ್ಲೆಯಾದ್ಯಂತ 14 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಬಾರಿ 3263 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ.
ತಾಲೂಕುವಾರು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಲು ಮಾರ್ಗಧಿಕಾರಿಗಳನ್ನು ನೇಮಿಸಲಾಗಿದೆ. ಪರೀಕ್ಷೆಯ ನಂತರ ಉತ್ತರ ಪತ್ರಿಕೆಗಳನ್ನು ನಗರದ ಸಂತ ಜೋಸೆಫ್ ಬಾಲಕಿಯರ ಪ್ರೌಢಶಾಲೆಗೆ ಸಂಗ್ರಹಿಸಿಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್ ಸಭೆಯಲ್ಲಿ ತಿಳಿಸಿದರು.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಹಾಜರಿರುವಂತೆ ಹಾಗೂ ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತಲೂ 144 ಸೆಕ್ಷನ್ ಜಾರಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *