ಪರೀಕ್ಷಾ ಗೌಪ್ಯತೆ ಹಾಗೂ ಪಾವಿತ್ರ್ಯತೆ ಕಾಪಾಡಬೇಕು: ಎಡಿಸಿ ಕುಮಾರಸ್ವಾಮಿ

ರಾಜ್ಯ

 

ಪರೀಕ್ಷಾ ಗೌಪ್ಯತೆ ಹಾಗೂ ಪಾವಿತ್ರ್ಯತೆ ಕಾಪಾಡಿ : ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ ಪಾಲನೆ ಮಾಡಿ

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಇದೇ ಜೂನ್ 24 ರಿಂದ ಜುಲೈ 5 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-3 ನಡೆಯಲಿದೆ. ಜಿಲ್ಲೆಯಲ್ಲಿ 2532 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 6 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಪರೀಕ್ಷಾ ಗೌಪ್ಯತೆ ಹಾಗೂ ಪಾವಿತ್ರ್ಯತೆ ಕಾಪಾಡಬೇಕು.
ಪರೀಕ್ಷೆ ಸಲುವಾಗಿ ಪಿಯು ಇಲಾಖೆ ಹೊರಡಿಸಿರುವ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್.ಓ
ಪಿ) ತಪ್ಪದೇ ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ- 3 ರ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಪೂರಕ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇದೇ ರೀತಿಯಾಗಿ ಮೂರನೇ ಪೂರಕ ಪರೀಕ್ಷೆಯನ್ನೂ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

 

 

ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷೆ ನಡೆಸುವ ಉದ್ದೇಶದಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವುದರೊಂದಿಗೆ ವೆಬ್ ಕಾಸ್ಟಿಂಗ್ ಸಹ ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಬಂದೋಬಸ್ತ್ ಕಲ್ಪಿಸಬೇಕು. ಸೂಕ್ತ ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳ ಪಾಲನೆಗಾಗಿ ನೇಮಿಸಿರುವ
ತ್ರಿಸದಸ್ಯ ಸಮಿತಿ ಅಧಿಕಾರಿಗಳು ಈ ಕಾರ್ಯವನ್ನು ನಿರ್ವಹಿಸಬೇಕು. ಬದಲಿಯಾಗಿ ಅನ್ಯರನ್ನು ಈ ಕಾರ್ಯಕ್ಕೆ ನಿಯೋಜಿಸುವಂತಿಲ್ಲ. ತ್ರಿಸದಸ್ಯ ಸಮಿತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಪರೀಕ್ಷಾ ಕಾರ್ಯ ಕೇವಲ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾತ್ರ ಸಂಬಂಧಿಸಿಲ್ಲ. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದರು.

ಪಿಯು ಇಲಾಖೆ ವತಿಯಿಂದ ಬೆಸ್ಕಾಂ ಅಧಿಕಾರಿಗಳಿಗೆ ಪತ್ರ ಬರೆದು, ಪರೀಕ್ಷಾ ದಿನಾಂಕಗಳಂದು ವಿದ್ಯುತ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾ ಖಾಜಾನೆಯಿಂದ ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಚಿತ್ರದುರ್ಗ ನಗರದ ಬಾಲಕಿರ ಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆ, ಹಿರಿಯೂರು , ಹೊಸದುರ್ಗ ಹಾಗೂ ಮೊಳಕಾಲ್ಮೂರು ಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆಯ ಕೊಟ್ರ ನಂಜಪ್ಪ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2532 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಸೂಕ್ಷ ಹಾಗೂ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಪೋನುಗಳನ್ನು ತರುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್, ಹೊಳಲ್ಕೆರೆ ತಹಶೀಲ್ದಾರ್ ಬಿ.ಬಿ. ಫಾತೀಮಾ, ಉಳಿದ ತಾಲ್ಲೂಕಿನ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Leave a Reply

Your email address will not be published. Required fields are marked *